ಬೀದರ್: ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಆರ್‌ಟಿಒ ಚೆಕ್‌ಪೋಸ್ಟ್‌ಗಳ (RTO Checkpost) ಮೇಲೆ ದಾಳಿ ನಡೆಸಿದ್ದಾರೆ.
ಚೆಕ್ ಪೋಸ್ಟ್‌ಗಳಲ್ಲಿ ಅಧಿಕಾರಿಗಳು ಲಂಚ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ವಿವಿಧೆಡೆ ದಾಳಿ (Lokayukta Raid) ನಡೆಸಿದ್ದಾರೆ. ಬೀದರ್, ಬಳ್ಳಾರಿ, ಕೋಲಾರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ.
ಬೀದರ್:
ಸಾರಿಗೆ ವಾಹನಗಳ ಸವಾರರಿಂದ ಹಣ ವಸೂಲಿ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತಾ ಅಧಿಕಾರಿಗಳು ಬೀದರ್‌ನ ಆರ್‌ಟಿಒ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ 9 ರಲ್ಲಿರುವ ಆರ್‌ಟಿಒ ಚೆಕ್‌ಪೋಸ್ಟ್ ಮೇಲೆ ದಾಳಿ ಮಾಡಿ ಲೋಕಾಯುಕ್ತಾ ಅಧಿಕಾರಿಗಳು ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ.
ವಾಹನ ಸವಾರದಿಂದ ಹಣ ವಸೂಲಿ ಹಾಗೂ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಲಂಚ ಪಡೆಯಲಾಗುತ್ತಿದೆ ಎಂಬ ಗಂಭೀರ ಆರೋಪ ಹಿನ್ನೆಲೆ ದಾಳಿ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಬಿ.ಕೆ ಉಮೇಶ್ ನೇತ್ರತ್ವದಲ್ಲಿ ನಾಲ್ಕು ಅಧಿಕಾರಿಗಳ ತಂಡದಿಂದ ದಾಳಿ ಮಾಡಿ ತೀವ್ರ ಪರಿಶೀಲನೆ ನಡೆಸಲಾಗುತ್ತಿದೆ.
ಬಳ್ಳಾರಿ:
ಇನ್ನೂ ಬಳ್ಳಾರಿ ತಾಲೂಕಿನ ಪಿಡಿ ಹಳ್ಳಿ ಸಮೀಪದ ಆರ್‌ಟಿಒ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಧ್ಯರಾತ್ರಿ 2 ಗಂಟೆಗೆ ದಾಳಿ ಮಾಡಿದ್ದು, ಚೆಕ್ ಪೋಸ್ಟ್‌ನಲ್ಲಿದ್ದ ಹೆಚ್ಚಿನ ಹಣವನ್ನು ವಶಪಡಿಸಿಕೊಂಡು ತಪಾಸಣೆ ಮುಂದುವರಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆದಿದ್ದು, ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ್, ರಫೀಕ್, ಸಂಗಮೇಶ್ ಸೇರಿದಂತೆ ಇತರ ಅಧಿಕಾರಿಗಳು ತಂಡದಲ್ಲಿದ್ದಾರೆ.
ಕೋಲಾರ:
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಲ ಕ್ರಾಸ್ ಬಳಿ ಇರುವ ಚೆಕ್‌ಪೋಸ್ಟ್ ಮೇಲೂ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಕಳೆದ ಮೂರು ಗಂಟೆಯಿಂದಲೂ ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಜೊತೆಗೆ ಮಹತ್ವದ ದಾಖಲೆಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.